ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಉಪ ಆಯುಕ್ತರಾದ ಗ್ಯಾನೇಶ್ ಕುಮಾರ್ ಹಾಗೂ ಸುಖ್ಬಿಂದರ್ ಸಿಂಗ್ ಸಂಧು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸಂಜೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರಪತಿಗಳಿಗೆ ಪಟ್ಟಿ ಸಲ್ಲಿಕೆ ಬಳಿಕ 18ನೇ ಲೋಕಸಭೆ ರಚನೆಯಾಗುತ್ತದೆ.
ಕೇಂದ್ರ ಸಂಪುಟದ ಶಿಫಾರಸು ಆಧರಿಸಿ ಬುಧವಾರ 17ನೇ ಲೋಕಸಭೆಯನ್ನು ರಾಷ್ಟ್ರಪತಿ ವಿಸರ್ಜಿಸಿದ್ದರು.
ಇತ್ತೀಚೆಗೆ ಹೊರಬಿದ್ದ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 293 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರಕ್ಕೆ ಮರಳಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣ 234 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು. ಬುಧವಾರ ನಡೆದ ಎನ್‌ಡಿಎ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸರ್ವಾನುಮತದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.
ರಾಷ್ಟ್ರಪತಿಗಳಿಗೆ ಗೆದ್ದ ಅಭ್ಯರ್ಥಿಗಳ ಪಟ್ಟಿ ಸಲ್ಲಿಕೆ ಬಳಿಕ ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರು ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ.