ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
"ಇದುವರೆಗೆ 25 ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ 27 ಶವಗಳು ಮರಣೋತ್ತರ ಪರೀಕ್ಷೆಗೆ ಬಂದಿವೆ. ಅನೇಕ ಗಾಯಾಳುಗಳನ್ನು ಸಹ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಾಹ್ ಸಿಎಂಒ ಉಮೇಶ್ ಕುಮಾರ್ ತ್ರಿಪಾಠಿ ಅವರು ತಿಳಿಸಿದ್ದಾರೆ.
ಪುಲ್ರೈ ಗ್ರಾಮದಲ್ಲಿ ನಡೆದ ಸತ್ಸಂಗದಲ್ಲಿ ಈ ಘಟನೆ ನಡೆದಿದೆ ಎಂದು ಇಟಾಹ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಜನದಟ್ಟಣೆಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಸಿಕಂದರ ರಾವ್ ಪೊಲೀಸ್ ಠಾಣೆ ಎಸ್‌ಎಚ್‌ಒ ಆಶಿಶ್ ಕುಮಾರ್ ಅವರು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.