ಪುರಿ : ಪುರಿ ಜಗನ್ನಾಥ ದೇವಾಲಯದಲ್ಲಿ ರಥಯಾತ್ರೆಯ ವೇಳೆ ನಡೆದ 2 ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದು, 130ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಭಾನುವಾರ ನಡೆದ ರಥಯಾತ್ರೆಯ ವೇಳೆ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ರಥವನ್ನು ಎಳೆಯುವಾಗ ಆತ ಮೂರ್ಛೆ ಹೋಗಿದ್ದ. ಕೂಡಲೇ ಪುರಿ ಜಿಲ್ಲಾಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಆತ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.
₹4 ಲಕ್ಷ ಪರಿಹಾರ ಘೋಷಣೆ:
ಮೃತರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆತನ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಭಾನುವಾರ ಝಾರ್ಸುಗುಡಾ ಜಿಲ್ಲೆಯಲ್ಲಿ ಜಗನ್ನಾಥ ದೇವಾಲಯದ ರಥಯಾತ್ರೆಯ ವೇಳೆ ರಥದ ಚಕ್ರಗಳ ಅಡಿಯಲ್ಲಿ ಸಿಲುಕಿ ಭಕ್ತರೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಶ್ಯಾಮ್ ಸುಂದರ್ ಕಿಶನ್ (45) ಎಂದು ಗುರುತಿಸಲಾಗಿದೆ.
ರಥವನ್ನು ಎಳೆಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದ ಆತನ ಮೇಲೆ ರಥದ ಚಕ್ರಗಳು ಹರಿದಿವೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
130 ಕ್ಕೂ ಹೆಚ್ಚು ಮಂದಿಗೆ ಗಾಯ:
ರಥಯಾತ್ರೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿ ಸೇರಿದಂತೆ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪುರಿ ಜಿಲ್ಲೆಯ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡ ಭಕ್ತರಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಾಯಗೊಂಡವರಲ್ಲಿ ಅರ್ಧದಷ್ಟು ಮಂದಿಗೆ ಒಂದೇ ದಿನದಲ್ಲಿ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ. ಕನಿಷ್ಠ 40 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.