ಹೈದರಾಬಾದ್: ಹೈದರಾಬಾದ್‌ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಅಗ್ನಿ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಿಲುಕೊಕೊಂಡಿದ್ದ ಸುಮಾರು 20ಕ್ಕೂ ಜನರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಕುಲ್ಸುಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲೆಯು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಗ್ನಿ ಅವಘಡದಲ್ಲಿ ಒಂದೇ ಕುಟುಂಬ ನಾಲ್ವರಿಗೆ ಸುಟ್ಟಗಾಯಗಳಾಗಿದ್ದು, ಮೂವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಹಡಿಯಲ್ಲಿ ಕಟ್ಟಡದ ಮಾಲೀಕರು ಪಿಠೋಪಕರಣ ತಯಾರಿಕಾ ಘಟಕವನ್ನು ಹೊಂದಿದ್ದರು. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.