ತಿರುವನಂತಪುರ: ಕೇರಳದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯು ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅರ್ಲಟ್ ಮತ್ತು ರಾಜ್ಯದ ಇತರ ಒಂಬತ್ತು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಜುಲೈ 14ರಿಂದ 16ರವರೆಗೆ ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗುಜರಾತ್‌ನ ಉತ್ತರದಲ್ಲಿ ಮತ್ತು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಜನರು ಮರಗಳ ಕೆಳಗೆ ನಿಂತುಕೊಳ್ಳದಂತೆ ಮತ್ತು ವಾಹನಗಳನ್ನು ನಿಲುಗಡೆ ಮಾಡದಂತೆ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪಾಧಿಕಾರ (ಕೆಎಸ್‌ಡಿಎಂಎ) ಎಚ್ಚರಿಕೆ ನೀಡಿದೆ.
ಹುಲ್ಲು, ಶೀಟು ಹಾಕಿದ ಅಥವಾ ಭದ್ರತೆ ಇಲ್ಲದ ಮನೆಗಳಲ್ಲಿ ವಾಸಿಸುತ್ತಿರುವವರು ಅಧಿಕಾರಿಗಳ ನಿರ್ದೇಶನದಂತೆ ಸುರಕ್ಷಿತ ಕಟ್ಟಡಗಳಿಗೆ ತೆರಳಬೇಕು. ಪ್ರತಿಕೂಲ ಹವಾಮಾನ ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿ ಪ್ರದೇಶಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಐಎಂಡಿ ಸೂಚಿಸಿದೆ.