ನವದೆಹಲಿ: ನೀಟ್-ಯುಜಿ 2024 ಪರೀಕ್ಷೆಯಲ್ಲಿನ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ 56 ನೀಟ್ ರ‍್ಯಾಂಕರ್‌ಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ನೀಟ್ ಪರೀಕ್ಷೆಯನ್ನು ರದ್ದು ಮಾಡದಂತೆ ಕೇಂದ್ರ ಮತ್ತು ಎನ್‌ಟಿಎಗೆ ಆದೇಶ ನೀಡಬೇಕು ಎಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ನೀಟ್ ವಿಷಯಕ್ಕೆ ಸಂಬಂಧಿಸಿದಂತೆ ಇದುವರೆಗೆ 26 ಅರ್ಜಿಗಳು ಸಲ್ಲಿಕೆಯಾಗಿದ್ದು, ಇವೆಲ್ಲವನ್ನೂ ಜುಲೈ 8ರಂದು ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ.
ಗುಜರಾತ್‌ನ ಸಿದ್ಧರ್ ಕೋಮಲ್ ಸಿಂಗ್ಲಾ ಮತ್ತು ಇತರ 55 ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವುದರಿಂದ ಪ್ರಾಮಾಣಿಕವಾಗಿ ಮತ್ತು ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಸಾಕಷ್ಟು ಹಾನಿಯಾಗುತ್ತದೆ. ಇದರಿಂದ ಶಿಕ್ಷಣದ ಹಕ್ಕಿನ ಉಲ್ಲಂಘನೆಯಾಗುತ್ತದೆ. ಹಾಗಾಗಿ ಪರೀಕ್ಷೆ ರದ್ದು ಮಾಡದಂತೆ ಕೇಂದ್ರ ಮತ್ತು ಎನ್‌ಟಿಎಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆ ಪೂರಕವಾಗಿ ಮೇ 5ರಂದು ನಡೆದ ಪರೀಕ್ಷೆಯಲ್ಲಿ ಅವ್ಯವಹಾರ ಎಸಗಿರುವವರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಶಿಕ್ಷಣ ಇಲಾಖೆಗೆ ಆದೇಶಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.