ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.
ಭಾರಿ ಮಳೆಯಿಂದಾಗಿ ಭೂಕುಸಿತ, ಆಸ್ತಿಪಾಸ್ತಿ ಹಾನಿ ಮತ್ತು ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತವಾಗಿದ್ದು, ಹಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಬಗ್ಗೆ ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಎಚ್ಚರಿಕೆ ನೀಡಿದೆ.
ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ ರಾಜ್ಯದ ಉಳಿದ ಆರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.
ನದಿಗಳ ತೀರಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಎರ್ನಾಕುಲಂನಲ್ಲಿ, ಭೂಕುಸಿತವಾಗಿದ್ದು, ಮನೆಗೆ ಹಾನಿಯಾಗಿದೆ. ಅಲ್ಲಿ ವಾಸಿಸುತ್ತಿದ್ದ ಕುಟುಂಬದವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಮಂಗಳವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ 45 ಜನರನ್ನು ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕೊಟ್ಟಾಯಂ ಜಿಲ್ಲಾಡಳಿತ ತಿಳಿಸಿದೆ.
ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಕೆ. ಸುಧಾಕರನ್, ಯುವ ಕಾಂಗ್ರೆಸ್, ಕೇರಳ ವಿದ್ಯಾರ್ಥಿ ಘಟಕ ಕೂಡ ಮುಂದೆ ಬಂದು ಪರಿಹಾರ ಕಾರ್ಯದಲ್ಲಿ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.