ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎಲ್ಲಾ ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಹೇಳಿದ್ದಾರೆ.
ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಹಾಗೂ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯದ ಸಚಿವರು ವಯನಾಡಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವಯನಾಡು ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆಯು ತುರ್ತು ಸಹಾಯವಾಣಿವನ್ನು ಆರಂಭಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.
ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ತೆರಳಿದೆ. ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು (ಕೆಎಸ್‌ಡಿಎಂಎ) ತಿಳಿಸಿದೆ.
ನೂರಾರು ಮಂದಿ ಸಿಲುಕಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದು, ಭಾರಿ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.