ಜಮ್ಮು: ಜಮ್ಮು-ಕಾಶ್ಮೀರದ ಡೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೋಡಾ ಜಿಲ್ಲೆಯ ದೇಸಾ ಅರಣ್ಯ ಪ್ರದೇಶದಲ್ಲಿ ನಾಲ್ಕು ತಾಸಿನ ಅವಧಿಯಲ್ಲಿ ಎರಡು ಬಾರಿ ಗುಂಡಿನ ಚಕಮಕಿ ನಡೆದಿದೆ.
ಜೈಷ್-ಎ-ಮೊಹಮ್ಮದ್ (ಜೆಎಎಂ) ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಭಯೋತ್ಪಾದಕರ ಪತ್ತೆಗಾಗಿ ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ ನಿರತವಾಗಿವೆ.
ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಪ್ರತಿಕೂಲ ಹವಾಮಾನ ಪರಿಸ್ಥಿತಿ, ಕಗ್ಗತ್ತಲು ಮತ್ತು ಕಠಿಣ ಭೂಪ್ರದೇಶದ ನಡುವೆ ಭಯೋತ್ಪಾದಕರು ಅವಿತುಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ನುಸುಳಿ ಅರಣ್ಯ ಪ್ರದೇಶದಲ್ಲಿ ಅವಿತಿರುವ ಭಯೋತ್ಪಾದಕರನ್ನು ಮಟ್ಟ ಹಾಕಲು ಪ್ಯಾರಾ ಕಮಾಂಡೋಗಳು, ಡ್ರೋನ್ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಬೆಂಬಲದೊಂದಿಗೆ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ದೇಸಾ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಹಾಗೂ ಮಂಗಳವಾರ ಮುಂಜಾನೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೇಜರ್ ಬ್ರಿಜೇಶ್ ಥಾಪಾ, ಒಬ್ಬ ಪೊಲೀಸ್ ಸೇರಿದಂತೆ ನಾಲ್ವರು ಸೇನೆಯ ಸಿಬ್ಬಂದಿ ಹುತಾತ್ಮರಾಗಿದ್ದರು.
ಉಗ್ರರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡೋಡಾ ಪಟ್ಟಣದಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ದೇಸಾ ಅರಣ್ಯ ಪ್ರದೇಶದಲ್ಲಿ ರಾಷ್ಟ್ರೀಯ ರೈಫಲ್ಸ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತಂಡ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿತ್ತು.