ನವದೆಹಲಿ: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವುದನ್ನು ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಆ ದೇಶದ ಆಂತರಿಕ ವಿಷಯ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.
ನವದೆಹಲಿ: ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ನೀಡುವುದನ್ನು ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹಿಂಸಾಚಾರ ಆ ದೇಶದ ಆಂತರಿಕ ವಿಷಯ ಎಂದು ಭಾರತದ ವಿದೇಶಾಂಗ ಇಲಾಖೆ ತಿಳಿಸಿದೆ.
ಬಾಂಗ್ಲಾದೇಶದಲ್ಲಿ ಪ್ರಸ್ತುತ ಭಾರತದ 15 ಸಾವಿರ ಜನ ನೆಲೆಸಿದ್ದಾರೆ. ಅದರಲ್ಲಿ 8 ಸಾವಿರ ವಿದ್ಯಾರ್ಥಿಗಳಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರಂಧೀರ್ ಜೈಸ್ವಾಲ್ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿನ ಎಲ್ಲ ಭಾರತೀಯರು ಸುರಕ್ಷಿತವಾಗಿದ್ದಾರೆ. ಅವರ ಸಹಾಯಕ್ಕೆ ವಿದೇಶಾಂಗ ಇಲಾಖೆಯಿಂದ 24X7 ಸಹಾಯವಾಣಿ ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವರಾದ ಎಸ್. ಜೈಶಂಕರ್ ಅವರು ಬಾಂಗ್ಲಾದೇಶದಲ್ಲಿನ ಬೆಳವಣಿಗೆಯನ್ನು ಹತ್ತಿರದಿಂದ ಗಮನಿಸುತ್ತಿದ್ದಾರೆ. ಇಲಾಖೆಯಿಂದ ಅಲ್ಲಿನ ಭಾರತೀಯರಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬಾಂಗ್ಲಾದಲ್ಲಿ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದ್ದು, ದೇಶದ ವಿವಿಧೆಡೆ ಸಂಭವಿಸಿದ ಹಿಂಸಾಚಾರದಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನ ಗಾಯಗೊಂಡಿದ್ದಾರೆ.
ಪ್ರತಿಭಟನೆಗಳನ್ನು ನಿಯಂತ್ರಿಸಲು ಬಾಂಗ್ಲಾದೇಶದ ಹಲವೆಡೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಢಾಕಾದಲ್ಲಿ ಕೋಲು, ದೊಣ್ಣೆ ಮತ್ತು ಕಲ್ಲುಗಳೊಂದಿಗೆ ರಸ್ತೆಗಿಳಿದು ಹೆದ್ದಾರಿಗಳನ್ನು ತಡೆದಿದ್ದಾರೆ. ಅಲ್ಲದೇ ಸಶಸ್ತ್ರ ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿದ್ದಾರೆ.