ನವದೆಹಲಿ: ರಾಜ್ಯಸಭೆಯಲ್ಲಿ ಮಾಡಿದ ತಮ್ಮ ಚೊಚ್ಚಲ ಭಾಷಣದಲ್ಲಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಸಂಸದೆ ಸುಧಾ ಮೂರ್ತಿ ಪ್ರಸ್ತಾಪಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಅವರು, 'ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಹೋರಾಡಲು ಸರ್ಕಾರಿ ಪ್ರಾಯೋಜಿತ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಅಗತ್ಯವಿದೆ' ಎಂದಿದ್ದಾರೆ.
'9ರಿಂದ 14 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಲಸಿಕೆ ನೀಡಲಾಗುತ್ತಿದೆ. ಹೆಣ್ಣು ಮಕ್ಕಳು ಇದನ್ನು ತೆಗೆದುಕೊಳ್ಳುವುದಿಂದ ಕ್ಯಾನ್ಸರ್‌ನಿಂದ ಪಾರಾಗಬಹುದು. ಹೆಣ್ಣು ಮಕ್ಕಳ ಅನುಕೂಲಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಉತ್ತೇಜಿಸಬೇಕಿದೆ' ಎಂದರು.
'ಈ ಲಸಿಕೆ ತುಂಬಾ ಪರಿಣಾಮಕಾರಿಯಾಗಿದ್ದು, ದುಬಾರಿ ಕೂಡ ಅಲ್ಲ. ಇಂದು ಒಂದು ಲಸಿಕೆಗೆ ₹1400 ಇದೆ. ಸರ್ಕಾರ ಮಧ್ಯ ಪ್ರವೇಶಿಸಿ ಮಾತುಕತೆ ನಡೆಸಿದರೆ ಇದನ್ನು ₹700ರಿಂದ ₹800ಕ್ಕೆ ಲಭ್ಯವಾಗುವಂತೆ ಮಾಡಬಹುದು. ಭವಿಷ್ಯದಲ್ಲಿ ನಮ್ಮ ಹೆಣ್ಣು ಮಕ್ಕಳಿಗೆ ಇದು ಪ್ರಯೋಜವಾಗಲಿದೆ' ಎಂದು ಹೇಳಿದರು.
ಭಾಷಣಕ್ಕೆ ಮೋದಿ ಶ್ಲಾಘನೆ
ತಮ್ಮ ಚೊಚ್ಚಲ ಭಾಷಣದಲ್ಲಿ ಮಹಿಳೆಯರ ಆರೋಗ್ಯದ ಕುರಿತಂತೆ ಮಾತನಾಡಿದ ಸಂಸದೆ ಸುಧಾ ಮೂರ್ತಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಮೋದಿ, 'ಕಳೆದ 10 ವರ್ಷಗಳಿಂದ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಅನೇಕ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದೆ. ಮಹಿಳೆಯರ ಆರೋಗ್ಯದ ಬಗ್ಗೆ ನಮ್ಮ ಸರ್ಕಾರಕ್ಕೆ ಕಾಳಜಿಯಿದೆ' ಎಂದರು.
'ಮಹಿಳೆಯರಿಗಾಗಿ ಶೌಚಾಲಯಗಳನ್ನು ನಿರ್ಮಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ಮತ್ತು ಗರ್ಭಾವಸ್ಥೆಯಲ್ಲಿರುವ ಮಹಿಳೆಯರಿಗೆ ಸೂಕ್ತ ಲಸಿಕೆಗಳನ್ನು ಒದಗಿಸಲಾಗುತ್ತಿದೆ' ಎಂದು ಹೇಳಿದರು.