ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ರಾಜ್ಯದ ಹಲವಡೆ ಸಂಭವಿಸಿದ ಮೇಘಸ್ಫೋಟದ ಪರಿಣಾಮ ಮೂವರು ಸಾವಿಗೀಡಾಗಿದ್ದು, 50 ಮಂದಿ ನಾಪತ್ತೆಯಾಗಿದ್ದಾರೆ. ಭಾರಿ ಮಳೆಯಿಂದಾಗಿ ಅನೇಕ ಮನೆಗಳು, ಸೇತುವೆಗಳು ಹಾಗೂ ರಸ್ತೆಗಳು ಕೊಚ್ಚಿಹೋಗಿವೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕುಲ್ಲುವಿನ ನಿರ್ಮಂದ್, ಸೈಂಜ್ ಮತ್ತು ಮಲಾನಾ ಪ್ರದೇಶಗಳಲ್ಲಿ, ಮಂಡಿಯ ಪಾಧಾರ್ ಮತ್ತು ಶಿಮ್ಲಾ ಜಿಲ್ಲೆಯ ರಾಂಪುರದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.
ಶಿಮ್ಲಾ ಜಿಲ್ಲೆಯ ರಾಂಪುರದ ಉಪವಿಭಾಗದಲ್ಲಿರುವ ಸಮೇಜ್ ಖುದ್‌ನಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಇಬ್ಬರು ಮೃತಪಟ್ಟು, 28 ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ಪಿಟಿಐಗೆ ತಿಳಿಸಿದ್ದಾರೆ.
ಸ್ಥಳದಿಂದ ಇಬ್ಬರನ್ನು ರಕ್ಷಿಸಲಾಗಿದೆ. ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದೆ ಎಂದು ಶಿಮ್ಲಾ ಉಪ ಆಯುಕ್ತ ಅನುಪಮ್ ಕಶ್ಯಪ್ ಹೇಳಿದ್ದಾರೆ.
ಶಿಮ್ಲಾ ಡಿಸಿ, ಎಸ್‌ಪಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್, ಪೊಲೀಸರು ಮತ್ತು ಗೃಹ ರಕ್ಷಕರ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ನಾಪತ್ತೆಯಾದವರ ಪತ್ತೆಗೆ ಡ್ರೋನ್‌ಗಳ ಸಹಾಯ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಮಂಡಿ ಜಿಲ್ಲೆಯ ಪಾಧಾರ್ ಉಪವಿಭಾಗದ ತೇರಾಂಗ್ ಬಳಿಯ ರಾಜ್ಬಾನ್ ಗ್ರಾಮದಲ್ಲಿ ಸಂಭವಿಸಿದ್ದ ಮೇಘಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. 9 ಮಂದಿ ನಾಪತ್ತೆಯಾಗಿದ್ದಾರೆ. ಎರಡು ಮನೆಗಳು ಕೊಚ್ಚಿ ಹೋಗಿದ್ದು, ಇನ್ನೊಂದು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಲು ಜಿಲ್ಲೆಯಲ್ಲೂ ಮೇಘಸ್ಫೋಟ ಸಂಭವಿಸಿದ್ದು, ನಿರ್ಮಂದ್ ಬ್ಲಾಕ್‌ನ ಭಾಗಿಪುಲ್ ಪ್ರದೇಶದಲ್ಲಿ 7 ಜನ ನಾಪತ್ತೆಯಾಗಿದ್ದಾರೆ. ಸುಮಾರು 8-9 ಮನೆಗಳು ಕೊಚ್ಚಿಹೋಗಿವೆ. ನಾಪತ್ತೆಯಾದವರ ಪತ್ತೆಗಾಗಿ ಸಿಐಎಸ್‌ಎಫ್ ಮತ್ತು ವಿಶೇಷ ಗೃಹರಕ್ಷಕ ದಳವನ್ನು ನಿಯೋಜಿಸಲಾಗಿದೆ ಎಂದು ಕುಲ್ಲು ಜಿಲ್ಲಾಧಿಕಾರಿ ಹೇಳಿದ್ದಾರೆ.
ಶಿಮ್ಲಾ ಜಿಲ್ಲೆಯ ಗಡಿಯಲ್ಲಿರುವ ಸಮೇಜ್‌ನಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ಮೂರ್ನಾಲ್ಕು ಮನೆಗಳಿಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.
ಕೇಂದ್ರದಿಂದ ಅಗತ್ಯ ನೆರವು ಭರವಸೆ:
ರಾಜ್ಯದಲ್ಲಿ ಮೇಘಸ್ಫೋಟದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರೊಂದಿಗೆ ಮಾತನಾಡಿದ್ದಾರೆ. ಕೇಂದ್ರದಿಂದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ಧಾರೆ.
ಈ ಬಗ್ಗೆ ತುರ್ತು ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಖವಿಂದರ್ ಸಿಂಗ್ , ಬುಧವಾರ ರಾತ್ರಿಯಿಂದ ಶಿಮ್ಲಾ, ಕುಲ್ಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಸುಮಾರು 50 ಜನರು ನಾಪತ್ತೆಯಾಗಿದ್ದಾರೆ. ಮನಾಲಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ.ಪಿ ನಡ್ಡಾ ಅವರು ಸಾಧ್ಯವಿರುವ ಎಲ್ಲ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
'ಹಿಮಾಚಲ ಪ್ರದೇಶದ ವಿವಿಧ ಸ್ಥಳಗಳಲ್ಲಿ ಮೇಘಸ್ಫೋಟದಿಂದಾಗಿ ಭಾರಿ ಹಾನಿ ಉಂಟಾಗಿದೆ. ರಾಜ್ಯದಲ್ಲಿ ಸಂಭವಿಸುತ್ತಿರುವ ನಿರಂತರ ನೈಸರ್ಗಿಕ ವಿಕೋಪಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದೇನೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವ ಭರವಸೆ ನೀಡಿದ್ದೇವೆ' ಎಂದು ನಡ್ಡಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಜೀವಹಾನಿಗೆ ಸಂತಾಪ ಸೂಚಿಸಿದ ಖರ್ಗೆ, ರಾಹುಲ್
ಮೇಘಸ್ಫೋಟದ ಘಟನೆಗಳಲ್ಲಿ ಉಂಟಾದ ಜೀವಹಾನಿಗೆ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜೂನ್ 27 ರಂದು ಮುಂಗಾರು ಪ್ರಾರಂಭವಾದಾಗಿನಿಂದ ಈವರೆಗೆ ಮಳೆ ಸಂಬಂಧಿತ ಘಟನೆಗಳಲ್ಲಿ ಸುಮಾರು 65 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು ₹ 433 ಕೋಟಿ ನಷ್ಟ ಸಂಭವಿಸಿದೆ ಎಂದು ರಾಜ್ಯದ ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.