ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಎಡಪ್ಪಾಡಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸ್ ಠಾಣೆಗೆ ಬಂದಿದ್ದ ಇಬ್ಬರು ಕಿಡಿಗೇಡಿಗಳು ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದ್ದಾರೆ.
ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಕ್ಷಣ ಬೆಂಕಿ ನಂದಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಚೆಗೆ ಚೆನ್ನೈನ ರಾಜಭವನದ ಮುಖ್ಯದ್ವಾರಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು.
'ತಮಿಳುನಾಡಿನ ನಿಜವಾದ ಕಾನೂನು ಮತ್ತು ಸುವ್ಯವಸ್ಥೆಯನ್ನು ಈ ಘಟನೆಯು ಬಿಂಬಿಸುತ್ತಿದೆ' ಎಂದು ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದರು.
ಆರ್‌ಎಸ್‌ಎಸ್ ಮುಖಂಡನ ಮನೆ ಮೇಲೂ ಪೆಟ್ರೋಲ್ ಬಾಂಬ್ ಎಸೆತ
ಈಚೆಗೆ ಕೊಯಮತ್ತೂರಿನ ಆರ್‌ಎಸ್‌ಎಸ್ ಮುಖಂಡರೊಬ್ಬರ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣಕ್ಕೆ ಸಂಬಂಧ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.
ಮೊಹಮ್ಮದ್ ಶಫಿ ಬಂಧಿತ ಆರೋಪಿ. ಬಂಧಿತನ ಇಬ್ಬರು ಸಹಚರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.