ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಗುರುವಾರವೂ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎರಡು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ದಕ್ಷಿಣ ಕೇರಳ ಕರಾವಳಿಯಲ್ಲಿ ಚಂಡಮಾರುತದಿಂದಾಗಿ ಆಗಸ್ಟ್ 15 ರಿಂದ 19ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಶುಕ್ರವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಿದೆ.
ಕೇರಳ, ಲಕ್ಷದ್ವೀಪ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಆಗಸ್ಟ್ 15 ರಿಂದ 19 ರವರೆಗೆ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.