ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ (ಆ.06) ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳು ತಿಳಿಸಿವೆ.
ಸುಮಾರು ಒಂದು ತಿಂಗಳ ಹಿಂದಷ್ಟೇ ಅಪೊಲೋ ಆಸ್ಪತ್ರೆಯಿಂದ ಅಡ್ವಾಣಿ ಅವರು ಡಿಸ್ಚಾರ್ಜ್ ಆಗಿದ್ದರು.
96 ವರ್ಷದ ಅಡ್ವಾಣಿ ಅವರು ಈ ಹಿಂದೆ ದೆಹಲಿಯ ಏಮ್ಸ್‌ಗೂ ದಾಖಲಾಗಿದ್ದರು. ಈ ವೇಳೆ ಜೆರಿಯಾಟ್ರಿಕ್ (ವಯೋಸಹಜ) ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿತ್ತು. ಕೆಲ ದಿನಗಳವರೆಗೆ ಚಿಕಿತ್ಸೆ ಪಡೆದು, ಆರೋಗ್ಯ ಸುಧಾರಣೆಯಾದ ಬಳಿಕ ಡಿಸ್ಚಾರ್ಜ್ ಆಗಿದ್ದರು.
ಮಾಜಿ ಉಪಪ್ರಧಾನಿ ಅಡ್ವಾಣಿ ಅವರಿಗೆ ಮೂರು ತಿಂಗಳ ಹಿಂದಷ್ಟೇ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್.ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಎಲ್.ಕೆ. ಅಡ್ವಾಣಿ ಅವರು 2002 ಜೂನ್ ತಿಂಗಳಿಂದ 2004 ಮೇ ತಿಂಗಳವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಮತ್ತು 1999 ಅಕ್ಟೋಬರ್ ತಿಂಗಳಿಂದ 2004 ಮೇ ತಿಂಗಳವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿಯ ಅಧ್ಯಕ್ಷರಾಗಿದ್ದರು.