ಕೋಲ್ಕತ್ತ: 'ನಬನ್ನ ಅಭಿಜಾನ್' ರ್‍ಯಾಲಿ ನಡೆಸುತ್ತಿರುವ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಹೌರಾದ ಸಂತ್ರಗಚಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಕೋಲ್ಕತ್ತ: 'ನಬನ್ನ ಅಭಿಜಾನ್' ರ್‍ಯಾಲಿ ನಡೆಸುತ್ತಿರುವ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಹೌರಾದ ಸಂತ್ರಗಚಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಆರ್.ಜಿ ಕರ್ ಕಾಲೇಜು ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ 'ಪಶ್ಚಿಮ್ ಬಂಗಾ ಛತ್ರ ಸಮಾಜ' ವಿದ್ಯಾರ್ಥಿ ಸಂಘಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ವೇದಿಕೆ 'ಸಂಗ್ರಾಮಿ ಜೌತ ಮಂಚ' ಪಶ್ಚಿಮ ಬಂಗಾಳದ ರಾಜ್ಯ ಸಚಿವಾಲಯ 'ನಬನ್ನ' ಕಡೆಗೆ ಮೆರವಣಿಗೆ ನಡೆಸಲು(ನಬನ್ನ ಅಭಿಜಾನ್) ಇಂದು ಕರೆ ನೀಡಿದ್ದವು.
ಹೌರಾ ಮೈದಾನದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಮುನ್ನುಗಲು ಪ್ರಯತ್ನಿಸಿದ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ಘರ್ಷಣೆ ನಡೆದಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ಮತ್ತು ಇಟ್ಟಿಗೆಗಳನ್ನು ಎಸೆದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ.
ಹೇಸ್ಟಿಂಗ್ಸ್ ಮತ್ತು ಎಂಜಿ ರೋಡ್‌ನಲ್ಲಿಯೂ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ನಡೆಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
'ಪೊಲೀಸರು ನಮ್ಮನ್ನು ಥಳಿಸುತ್ತಿರುವುದೇಕೆ? ನಾವು ಕಾನೂನು ಉಲ್ಲಂಘಿಸಿಲ್ಲ. ಕೊಲೆಯಾದ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸುವಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲಿ' ಎಂದು ಪ್ರತಿಭಟನಾನಿರತ ಮಹಿಳೆಯೊಬ್ಬರು ಹೇಳಿದರು.
'ಬ್ಯಾರಿಕೇಡ್‌ಗಳನ್ನು ಭೇದಿಸಿ ಭದ್ರತಾ ಸಿಬ್ಬಂದಿಯ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಲು ಯತ್ನಿಸಿದ್ದಾರೆ. ಹೀಗಾಗಿ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಪ್ರಯೋಗಿಸಬೇಕಾಯಿತು' ಎಂದು ಪೊಲೀಸರು ಸಮಜಾಯಿಷಿ ನೀಡಿದ್ದಾರೆ.