ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಮಲಯಾಳ ಸಿನಿಮಾ ಕಲಾವಿದರ ಸಂಘದ (ಎಎಂಎಂಎ) ಮಾಜಿ ಪ್ರಧಾನ ಕಾರ್ಯದರ್ಶಿ, ನಟ ಸಿದ್ದೀಕ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸೆ. 30ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಸಿದ್ದೀಕ್ ಪರ ವಕೀಲ ರಂಜಿತಾ ರೋಹ್ಟಗಿ ಸಲ್ಲಿಸಿದ ಅರ್ಜಿ ವಿಚಾರಣೆಯೂ ನ್ಯಾಯಮೂರ್ತಿಗಳಾದ ಬೆಲಾ.ಎಂ. ತ್ರಿವೇದಿ ಹಾಗೂ ಸತೀಶ್‌ಚಂದ್ರ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.
ಸಿದ್ದೀಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸೆ.24ರಂದು ಕೇರಳ ಹೈಕೋರ್ಟ್ ವಜಾಗೊಳಿಸಿತ್ತು. ಆರೋಪಿ ಎದುರಿಸುತ್ತಿರುವ ಪ್ರಕರಣದ ಗಂಭೀರತೆ ಪರಿಗಣಿಸಿ, ಕಸ್ಟಡಿ ಪಡೆದು ವಿಚಾರಣೆ ನಡೆಸುವುದು ಅನಿವಾರ್ಯ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.
'ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಆಮಿಷ ಒಡ್ಡಿ ತಿರುವನಂತಪುರ ಹೋಟೆಲ್‌ವೊಂದರಲ್ಲಿ 2016ರಲ್ಲಿ ಸಿದ್ದೀಕ್ ಅವರು ಅತ್ಯಾಚಾರ ನಡೆಸಿದ್ದಾರೆ' ಎಂದು ಮಹಿಳೆ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿದ್ದೀಕ್ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಾಗಿತ್ತು.