ನವದೆಹಲಿ: ದೇಶಾದ್ಯಂತ ಆಗಸ್ಟ್ ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿದ್ದು, ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದೆ.
ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ವಾಯುವ್ಯ ಭಾರತದ ಕೆಲವು ಪ್ರದೇಶಗಳು, ದಕ್ಷಿಣ ಪೆನಿನ್ಸುಲಾದ ಹಲವು ಭಾಗಗಳು, ಉತ್ತರ ಬಿಹಾರ ಮತ್ತು ಈಶಾನ್ಯ ಉತ್ತರ ಪ್ರದೇಶಗಳು, ಹಾಗೆಯೇ ಈಶಾನ್ಯ ಭಾರತದ ಹೆಚ್ಚಿನ ಭಾಗಗಳನ್ನು ಹೊರತುಪಡಿಸಿ, ಇತರ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ವರ್ಚುವಲ್ ಮೂಲಕ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, ಸೆಪ್ಟೆಂಬರ್‌ನಲ್ಲಿ ದೇಶವು ಸಾಮಾನ್ಯಕ್ಕಿಂತ ಹೆಚ್ಚು ಮಳೆ, ಅಂದರೆ 109 ಮಿಲಿ ಮೀಟರ್ ಗೂ ಹೆಚ್ಚು ಮಳೆ ಪಡೆಯುವ ನಿರೀಕ್ಷೆಯಿದೆ ಎಂದರು.
ಉತ್ತರಾಖಂಡ್, ಹಿಮಾಚಲ ಪ್ರದೇಶದ ಕೆಲವು ಭಾಗಗಳು, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಪಕ್ಕದ ಪ್ರದೇಶಗಳು ಸೇರಿದಂತೆ ವಾಯುವ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರವಾಹ ಹಾಗೂ ಭೂಕುಸಿತಗಳ ಬಗ್ಗೆ ಜಾಗರೂಕರಾಗಿರಬೇಕು" ಎಂದಿದ್ದಾರೆ.
ಮಾನ್ಸೂನ್ ಟ್ರೊ ತನ್ನ ಸಹಜ ಸ್ಥಿತಿಯಲ್ಲಿ ಉಳಿಯುವ ನಿರೀಕ್ಷೆಯಿದೆ. ಬಂಗಾಳ ಕೊಲ್ಲಿಯಲ್ಲಿ ಹಲವು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಪಶ್ಚಿಮ-ವಾಯುವ್ಯವಾಗಿ ರಾಜಸ್ಥಾನದವರೆಗೆ ಚಲಿಸಬಹುದು ಎಂದು ಅವರು ಹೇಳಿದ್ದಾರೆ.