ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ.
ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಕೆಲ ಹೊತ್ತಿನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಅಪರಿಚಿತ ಉಗ್ರರ ಗುರುತು ಪತ್ತೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಕಿಸ್ತವಾರ್ ಜಿಲ್ಲೆ ಚಾತ್ರೂ ಪ್ರದೇಶದಲ್ಲಿ ಉಗ್ರರೊಂದಿಗೆ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಸೇರಿ ಸೇನೆಯ ಇಬ್ಬರು ಸಿಬ್ಬಂದಿ ಹುತಾತ್ಮರಾಗಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ (ವಿಧಾನಸಭೆ) ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು( ಶನಿವಾರ) ಭೇಟಿ ನೀಡಲಿದ್ದು, ದೋಡಾದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
42 ವರ್ಷಗಳ ಬಳಿಕ ಪ್ರಧಾನಿಯೊಬ್ಬರು ದೋಡಾಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.