ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಪರಿಗಣಿಸಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕಲ್ಕತ್ತ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು.
ಸಂದೀಪ್ ಘೋಷ್ ಅವಧಿಯಲ್ಲಿ ಆರ್.ಜಿ. ಕರ್ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಅಲ್ಲಿನ ಮಾಜಿ ಅಧಿಕಾರಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.
ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಪರಿಗಣಿಸುವಂತೆ ಕೋರಿ ಘೋಷ್ ಸಲ್ಲಿಸಿದ್ದ ಅರ್ಜಿಯನ್ನು ಆ.23ರಂದು ವಜಾಗೊಳಿಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧಿತ ತನಿಖೆಯನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿತ್ತು.