ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರು ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಜಮ್ಮು-ಕಾಶ್ಮೀರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೌಲ್ ಗುರುವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೌಲ್, ಜಮ್ಮುವಿನಲ್ಲಿ ಎರಡು ರ‍್ಯಾಲಿ ಹಾಗೂ ಕಾಶ್ಮೀರದಲ್ಲಿ ಒಂದು ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಸೆಪ್ಟೆಂಬರ್ 6 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.
ಅಮಿತ್ ಶಾ ಕಾಶ್ಮೀರಕ್ಕೂ ಭೇಟಿ ನೀಡಲಿದ್ದಾರೆ. ಬುಧವಾರ ಶ್ರೀನಗರದಲ್ಲಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಕಾಶ್ಮೀರ ಜನತೆ ನರೇಂದ್ರ ಮೋದಿ ಸರ್ಕಾರದಲ್ಲಿ ನಂಬಿಕೆ ಇಟ್ಟಿದ್ದು, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಅವರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಉಗ್ರರ ದಾಳಿ ನಡೆದಿದ್ದ ದೋಡಾ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಬಿಜೆಪಿ ಚುನಾವಣೆ ಎದುರಿಸುತ್ತಿದೆ. 90 ಸದಸ್ಯ ಬಲದ ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1ರವರೆಗೂ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ.