'ಚುನಾವಣಾ ಬಾಂಡ್ ಹೆಸರಿನಲ್ಲಿ ಉದ್ಯಮಗಳ ಮೇಲೆ ಒತ್ತಡ ತಂದು ಕೋಟ್ಯಂತರ ರೂಪಾಯಿ ಸುಲಿಗೆ ಮಾಡಲಾಗಿದೆ' ಎಂಬ ಆರೋಪದ ಅಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವ ಕುರಿತು ಚಿಂತನೆ ನಡೆದಿದೆ.
ಪ್ರಕರಣ ವರ್ಗಾವಣೆಗೆ ನ್ಯಾಯಾಲಯದ ಅನುಮತಿ ಪಡೆಯುವ ಕುರಿತು ಭಾನುವಾರ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ, ಮೈಕೋ ಲೇಔಟ್ ಎಸಿಪಿ ಮತ್ತು ತಿಲಕ್ ನಗರದ ಠಾಣಾಧಿಕಾರಿ ಸಭೆ ನಡೆಸಿ, ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಾಮಾನ್ಯವಾಗಿ ₹ 3 ಕೋಟಿಗೂ ಹೆಚ್ಚು ಮೊತ್ತದ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗುತ್ತದೆ. ಈ ಪ್ರಕರಣದಲ್ಲಿ 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಹಾಗಾಗಿ ಕೋರ್ಟ್ ಅನುಮತಿ ಕಡ್ಡಾಯವಾಗಿದೆ' ಎಂದು ಮೂಲಗಳು ತಿಳಿಸಿವೆ.
ನ್ಯಾಯಾಲಯದ ನಿರ್ದೇಶನದ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಕೇಂದ್ರ-ರಾಜ್ಯ ಘಟಕದ ಪದಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.