ನವದೆಹಲಿ: ಕೋಲ್ಕತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಪರಿಗಣಿಸಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕಲ್ಕತ್ತ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ, ಮನೋಜ್ ಮಿಶ್ರಾ ನೇತೃತ್ವದ ಪೀಠವು ಸಂದೀಪ್ ಘೋಷ್ ಮನವಿಯನ್ನು ತಿರಸ್ಕರಿಸಿದೆ.
ವಿದ್ಯಾರ್ಥಿನಿ ಕೊಲೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಎರಡೂ ಪ್ರಕರಣಗಳ ಸಂಬಂಧ ತನಿಖಾ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನ್ಯಾಯಪೀಠ ಸೂಚಿಸಿತು.
ಘೋಷ್ ಪರ ವಾದ ಮಂಡಿಸಿದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ಎರಡು ಪ್ರಕರಣಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸಬೇಕು ಎಂದು ಪ್ರತಿಪಾದಿಸಿದರು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ಸಿಬಿಐ ಪರ ವಾದ ಮಂಡಿಸಿದರು.
ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು.
ಸಂದೀಪ್ ಘೋಷ್ ಅವಧಿಯಲ್ಲಿ ಆರ್.ಜಿ. ಕರ್ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಅಲ್ಲಿನ ಮಾಜಿ ಅಧಿಕಾರಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.
ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಪರಿಗಣಿಸುವಂತೆ ಕೋರಿ ಘೋಷ್ ಸಲ್ಲಿಸಿದ್ದ ಅರ್ಜಿಯನ್ನು ಆ.23ರಂದು ವಜಾಗೊಳಿಸಿದ್ದ ಹೈಕೋರ್ಟ್, ಪ್ರಕರಣ ಸಂಬಂಧಿತ ತನಿಖೆಯನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಸಿಬಿಐಗೆ ವರ್ಗಾಯಿಸುವಂತೆ ಆದೇಶಿಸಿತ್ತು.