ನ್ಯೂಯಾರ್ಕ್: ಪ್ಯಾಲೆಸ್ಟೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ, ಯುದ್ಧಪೀಡಿತ ಗಾಜಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗನೆ ಶಾಂತಿ ಮತ್ತು ಸ್ಥಿರತೆ ನೆಲೆಸುವಂತೆ ಮಾಡಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಮೋದಿ ವಿಶ್ವಸಂಸ್ಥೆಯ ಮಹಾ ಅಧಿವೇಶನದ ವೇಳೆ ವಿವಿಧ ದೇಶಗಳ ಗಣ್ಯರನ್ನು ಭೇಟಿಯಾಗಿದ್ದಾರೆ.
ಅಬ್ಬಾಸ್ ಅವರನ್ನು ಭೇಟಿಯಾದ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿಯಾದೆ. ಗಾಜಾದಲ್ಲಿ ಶೀಘ್ರದಲ್ಲೇ ಶಾಂತಿ ಮತ್ತು ಸ್ಥಿರತೆ ನೆಲೆಗೊಳ್ಳುವಂತೆ ಮಾಡಲು ಭಾರತ ಬೆಂಬಲ ನೀಡಲಿದೆ ಎಂಬುದನ್ನು ಪುನರುಚ್ಚರಿಸಿದ್ದೇನೆ. ದೀರ್ಘಕಾಲದ ಸ್ನೇಹ ಬಲಪಡಿಸುವ ನಿಟ್ಟಿನಲ್ಲಿ ಚರ್ಚಿಸಿದ್ದೇವೆ' ಎಂದು ತಿಳಿಸಿದ್ದಾರೆ.
ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್, 'ವಿಶ್ವಸಂಸ್ಥೆ ಮಹಾ ಅಧಿವೇಶನದ ಸಂದರ್ಭದಲ್ಲಿ ಅಬ್ಬಾಸ್ ಅವರನ್ನು ಭೇಟಿಯಾದ ಪ್ರಧಾನಿ, ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೆಸ್ಟೀನ್ ಜನರಿಗೆ ಬೆಂಬಲ ಮುಂದುವರಿಸುವುದಾಗಿ ಒತ್ತಿ ಹೇಳಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ.
ಮೋದಿ ಅವರು ಇಂದು ವಿಶ್ವಸಂಸ್ಥೆ ಮಹಾ ಅಧಿವೇಶನ್ನುದ್ದೇಶಿಸಿ ಮಾತನಾಡಲಿದ್ದಾರೆ.
2023ರ ಅಕ್ಟೋಬರ್ 7ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿತ್ತು. 1,500ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. ಇದರಿಂದ ಕೆರಳಿದ ಇಸ್ರೇಲ್, ಪ್ರತಿದಾಳಿ ನಡೆಸುತ್ತಿದೆ.
ಸಂಘರ್ಷ ಆರಂಭವಾದಾಗಿನಿಂದ ಈ ವರ್ಷದ ಸೆಪ್ಟೆಂಬರ್ 16ರ ವರೆಗೆ 41,226 ಪ್ಯಾಲೆಸ್ಟೀನಿಯರು ಮೃತಪಟ್ಟಿದ್ದಾರೆ. 95,413 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಇಲಾಖೆ ತಿಳಿಸಿರುವುದಾಗಿ ವಿಶ್ವಸಂಸ್ಥೆ ಹೇಳಿದೆ.