ಮ್ಯಾಡ್ರಿಡ್: ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಠಾತ್ ಪ್ರವಾಹ ಸಂಭವಿಸಿದ್ದು, ಕನಿಷ್ಠ 51 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಹಾನಿಯಾಗಿದೆ.
ಪ್ರವಾಹಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಹೋಗಿವೆ. ಜತೆಗೆ, ಜನರು ಮರಗಳ ಮೇಲೆ ಕುಳಿತಿದ್ದು, ನೆರವಿಗೆ ಮನವಿ ಮಾಡುತ್ತಿರುವ ದೃಶ್ಯಗಳು ವಿಡಿಯೊಗಳಲ್ಲಿ ಸೆರೆಯಾಗಿವೆ.
ಮಳೆ ಕಡಿಮೆಯಾಗುವ ತನಕ ಅನಗತ್ಯವಾಗಿ ಮನೆಯಿಂದ ಹೊರಗೆ ಓಡಾಡದಂತೆ ಜನರಲ್ಲಿ ಮನವಿ ಮಾಡಲಾಗಿದೆ. ನೀರಿನ ಪ್ರಮಾಣ ಕಡಿಮೆಯಾದ ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೆಲೆನ್ಸಿಯಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೆಲೆನ್ಸಿಯಾದ ಟೂರಿಸ್, ಯುಟಿಯೆಲ್‌ನಂತಹ ಕೆಲವು ಪ್ರದೇಶಗಳಲ್ಲಿ 200 ಮಿ.ಮೀ. ಮಳೆಯಾಗಿದೆ. ಜತೆಗೆ ಹಲವೆಡೆ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ.