ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಗುರುವಾರ (ಇಂದು) ಶಾಸಕಾಂಗ ಪಕ್ಷದ ಸಭೆ ನಡೆಯಿತು. ಬಳಿಕ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ.
ಇದಕ್ಕೂ ಮೊದಲು, ನ್ಯಾಷನಲ್ ಕಾನ್ಫರೆನ್ಸ್‌ನ ಎಲ್ಲಾ ಚುನಾಯಿತ ಶಾಸಕರು ಪಕ್ಷದ ಪ್ರಧಾನ ಕಚೇರಿ ನವಾ-ಎ-ಸುಬಾದಲ್ಲಿ ಮಾತುಕತೆ ನಡೆಸಿದ್ದರು.
ಚುನಾವಣೆ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಯಂತೆ, ಸರ್ಕಾರ ರಚನೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಶುಕ್ರವಾರ ಸಭೆ ನಡೆಸಲಾಗುವುದು ಎಂದೂ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. 90 ಸದಸ್ಯ ಬಲದ ವಿಧಾನಸಭೆಯಲ್ಲಿ 42 ಸ್ಥಾನಗಳನ್ನು ಗೆಲ್ಲುವ ಮೂಲಕ ನ್ಯಾಷನಲ್ ಕಾನ್ಫರೆನ್ಸ್ ಗೆಲುವಿನ ನಗೆ ಬೀರಿದೆ.
29 ಕ್ಷೇತ್ರಗಳಲ್ಲಿ ಗೆದ್ದಿರುವ ಬಿಜೆಪಿ 2ನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಗಳಿಗೆ (ಪಿಡಿಪಿ) ಭಾರಿ ಹಿನ್ನಡೆಯಾಗಿದ್ದು, ಕ್ರಮವಾಗಿ ಆರು ಮತ್ತು ಮೂರು ಸ್ಥಾನಗಳಲ್ಲಷ್ಟೇ ಜಯಗಳಿಸಿವೆ.
1996ರ ಚುನಾವಣೆಯ ಬಳಿಕ ಯಾವುದೇ ಪಕ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ 40ಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ಇದೇ ಮೊದಲು.