ಹೈದರಾಬಾದ್: ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಿಗೆ ಸಂಬಂಧಿಸಿದ ಹಣದ ಅಕ್ರಮ ವರ್ಗಾವಣೆ ಕುರಿತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಜರುದ್ದೀನ್ ಅವರನ್ನು ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಅ.3ರಂದು ವಿಚಾರಣೆಗೆ ಹಾಜರಾಗುವಂತೆ ಅಜರುದ್ದೀನ್ ಅವರಿಗೆ ಇ.ಡಿ ಸಮನ್ಸ್ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿದ್ದರು. ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಿದ್ದ ಇ.ಡಿ ಆ.8ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
'ಅಜರುದ್ದೀನ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು' ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಜರುದ್ದೀನ್ ಜೊತೆ ಅವರ ಕಾನೂನು ತಜ್ಞರ ತಂಡವು ಆಗಮಿಸಿತ್ತು.
ಹೈದರಾಬಾದ್ ಕ್ರಿಕೆಟ್ ಅಸೋಷಿಯೇಷನ್‌ನಲ್ಲಿ ₹20 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪದಡಿ ತೆಲಂಗಾಣ ಭಷ್ಟಾಚಾರ ನಿಗ್ರಹ ದಳವು (ಎಸಿಬಿ) ಮೂರು ಪ್ರಕರಣ ದಾಖಲಿಸಿಕೊಂಡು ದೋಷಾರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇ.ಡಿಯು ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿದೆ.
ಹೈದರಾಬಾದ್ ಕ್ರಿಕೆಟ್ ಅಸೋಷಿಯೇಷನ್‌ನ ಮಾಜಿ ಅಧ್ಯಕ್ಷರಾದ ಅಜರುದ್ದೀನ್ ಅವರು ಅವ್ಯವಹಾರದಲ್ಲಿ ಪಾಲುದಾರರಾಗಿದ್ದಾರಾ? ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ.