ಉತ್ತರ ಪ್ರದೇಶದಲ್ಲಿ ಪ್ರಮುಖ ಹುದ್ದೆಗಳಿಗೆ ನಿರ್ದಿಷ್ಟ ಜಾತಿಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು 'ಎಕ್ಸ್'ನಲ್ಲಿ ಪೋಸ್ಟ್ ಹಾಕಿದ್ದಕ್ಕೆ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಿಂಧುತ್ವವನ್ನು ಪ್ರಶ್ನಿಸಿ ಉಪಾಧ್ಯಾಯ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರಿಷಿಕೇಶ್ ರಾಯ್ ಮತ್ತು ಎಸ್.ವಿ.ಎನ್ ಭಟ್ಟಿ ಅವರನ್ನು ಒಳಗೊಂಡ ನ್ಯಾಯಪೀಠವು, 'ಭಾರತದಲ್ಲಿ ಪ್ರತಿಯೊಬ್ಬರ ಅಭಿಪ್ರಾಯಕ್ಕೂ ಗೌರವವಿದೆ. ಪತ್ರಕರ್ತರ ಹಕ್ಕುಗಳನ್ನು ಸಂವಿಧಾನದ 19(1)ನೇ ವಿಧಿಯು ರಕ್ಷಿಸುತ್ತದೆ. ಸರ್ಕಾರವನ್ನು ಟೀಕಿಸಿದರು ಎಂಬ ಮಾತ್ರಕ್ಕೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತಿಲ್ಲ' ಎಂದು ಹೇಳಿತು.
'ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಾಧ್ಯಾಯ ಅವರನ್ನು ಬಂಧಿಸುವಂತಿಲ್ಲ. ಬಲವಂತದ ಕ್ರಮ ತೆಗೆದುಕೊಳ್ಳುವಂತಿಲ್ಲ' ಎಂದು ತಿಳಿಸಿತು.
ನಂತರ ನ್ಯಾಯಾಲಯವು, ಈ ಬಗ್ಗೆ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ರವಾನಿಸಿತು.