ಬರೇಲಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಮಹಿಳೆಯರು ಹಾಗೂ ಯುವತಿಯರೊಂದಿಗೆ ಸ್ನೇಹ ಬೆಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಬರೇಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ದಿಲ್ಶಾದ್ ಅಲಿಯಾಸ್ ದಿಲ್ಶಾದ್ ಜಮಾಲಿ ಎಂದು ಗುರುತಿಸಲಾಗಿದೆ.
ಆರೋಪಿಯು 10 ವರ್ಷಗಳ ಹಿಂದಿನ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ, ಮಹಿಳೆಯರು ಮತ್ತು ಯುವತಿಯೊಂದಿಗೆ ಸ್ನೇಹ ಬೆಳೆಸುತ್ತಿದ್ದನು. ಬಳಿಕ ಬೇಡಿಕೆಗಳನ್ನು ಪೂರೈಸದಿದ್ದರೆ ಸಂತ್ರಸ್ತೆಯರ ಖಾಸಗಿ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದೇ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ವಿಚಾರಣೆ ವೇಳೆ ದಿಲ್ಶಾದ್ ಜಮಾಲಿ ಬಗ್ಗೆ ಮಾಹಿತಿ ದೊರಕಿತು ಎಂದು ಪೊಲೀಸರು ಹೇಳಿದ್ದಾರೆ.
ದಿಲ್ಶಾದ್ ಜಮಾಲಿನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.