ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಕಾರ್ಯಕರ್ತ ಸಚಿನ್ ಅಲಿಯಾಸ್ ಮುನ್ನಾ ಕುರ್ಮಿ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಈ ಘಟನೆ ನಡೆದಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ದುಷ್ಕರ್ಮಿಗಳು ಶುಕ್ರವಾರ ತಡರಾತ್ರಿ ಹರಿತವಾದ ಆಯುಧಗಳಿಂದ ಕುರ್ಮಿ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂವರು ಆರೋಪಿಗಳು ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ.
ಮೋದಿ ಅವರು ಮುಂಬೈ, ವಾಶಿಮ್, ಠಾಣೆ ನಗರಗಳಲ್ಲಿ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇತ್ತ ರಾಹುಲ್ ಗಾಂಧಿ ಅವರು ಕೊಲ್ಲಾಪುರದಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.