ಸಹರಾನ್‌ಪುರ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹತ್ತು ವರ್ಷಗಳ ಹಿಂದೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸಹರಾನ್‌ಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯದಲ್ಲಿ ಆರೋಪ ಹೊರಿಸಲಾಗಿದೆ.
2014ರಲ್ಲಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧ ಮಸೂದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಪ್ರಕರಣ ಸಂಬಂಧ, ಸಂಸದ-ಶಾಸಕರ (ಎಂಪಿ-ಎಂಎಲ್‌ಎ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹಿತ್ ಶರ್ಮಾ ಅವರ ಎದುರು ಮಂಗಳವಾರ ಆರೋಪಗಳನ್ನು ನಿಗದಿಪಡಿಸಲಾಗಿದೆ ಎಂದು ಸರ್ಕಾರಿ ವಕೀಲ ಗುಲಾಬ್ ಸಿಂಗ್ ಬುಧವಾರ ತಿಳಿಸಿದರು.
ಈ ಪ್ರಕರಣದಲ್ಲಿ 19 ಮಂದಿಯ ಹೇಳಿಕೆಯನ್ನು ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ದೇವಬಂದ್ ಠಾಣಾ ವ್ಯಾಪ್ತಿಯ ಲಬಕಾರಿ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಷಣ ಮಾಡುವಾಗ ಮಸೂದ್ ಅವರು ಮೋದಿ ಅವರನ್ನು ತುಂಡು ತುಂಡು ಮಾಡುವುದಾಗಿ ಬೆದರಿಕೆ ಹಾಕಿ, ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮಸೂದ್ ಹೇಳಿಕೆ ತೀವ್ರ ವಿವಾದ ಹುಟ್ಟುಹಾಕಿದ್ದು, ಹೇಳಿಕೆಯ ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಅಲ್ಲದೆ, ಮಸೂದ್ ಅವರು ಬಹುಜನ ಸಮಾಜ ಪಕ್ಷದ ಇಬ್ಬರು ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದಾರೆ.
2023ರಲ್ಲಿ ಬಹುಜನ ಸಮಾಜ ಪಕ್ಷ ಸೇರಿದ್ದ ಮಸೂದ್, ಅದೇ ವರ್ಷ ಮತ್ತೆ ಕಾಂಗ್ರೆಸ್‌ಗೆ ಮರಳಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಸಹರಾನ್‌ಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.