ಹೈದರಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವ ಬೇಡಿಕೆಗೆ ಕೇಂದ್ರ ಸರ್ಕಾರವು ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡಲಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.
ಆದರೆ ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ಮರುಸ್ಥಾಪಿಸುವುದಿಲ್ಲ ಎಂದು ಅವರು ಖಚಿತಪಡಿಸಿದ್ದಾರೆ.
ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಸ್ಥಾನಮಾನ ಮರುಸ್ಥಾಪನೆ ಮಾಡಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಮನವಿ ಮಾಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ರೀತಿ ಪ್ರತಿಕ್ರಿಯಿಸಿದ್ದಾರೆ.
'ಕೇಂದ್ರ ಸರ್ಕಾರದ ಪ್ರಯತ್ನಗಳಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತವಾಗಿ ಚುನಾವಣೆಗಳು ನಡೆದಿವೆ. ಮರುಮತದಾನದ ಅಗತ್ಯವೂ ಇರಲಿಲ್ಲ. ಬಿಜೆಪಿಯ ಪ್ರದರ್ಶನ ಶ್ಲಾಘನೀಯವಾಗಿದ್ದು, ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
ಹೈದರಾಬಾದ್ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಶೇ 50ರಷ್ಟು ಮತದಾನ ನಡೆದಿದೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನದ ಪ್ರಮಾಣ ಅದಕ್ಕಿಂತಲೂ ಹೆಚ್ಚಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಮತ್ತು ಬ್ಲಾಕ್ ಅಭಿವೃದ್ಧಿ ಮಂಡಳಿ (ಬಿಡಿಸಿ) ಚುನಾವಣೆಗಳು ಸಹ ಯಶಸ್ವಿಯಾಗಿ ನಡೆದಿವೆ ಎಂದು ಅವರು ಹೇಳಿದರು.