ಹೈದರಾಬಾದ್: ಜಮ್ಮು ಪ್ರದೇಶದಲ್ಲಿ ಬಿಜೆಪಿಯು ಐತಿಹಾಸಿಕ ಗೆಲುವು ಸಾಧಿಸಿದೆ. ಈ ಮೂಲಕ ಜಮ್ಮು 'ಕಾಂಗ್ರೆಸ್ ಮುಕ್ತ' ಎಂದು ಕೇಂದ್ರ ಕಲ್ಲಿದ್ದಲು ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈಕೂತ್ರಿಕೂಟ ಗೆಲುವು ಸಾಧಿಸಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಕಿಶನ್ ರೆಡ್ಡಿ , ಜಮ್ಮು ಪ್ರದೇಶದ 43 ಸ್ಥಾನಗಳ ಪೈಕಿ 29 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಗೆದ್ದಿದೆ. ಈ ಮೂಲಕ ಜಮ್ಮು 'ಕಾಂಗ್ರೆಸ್ ಮುಕ್ತವಾಗಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಹೊಂದಿದ್ದಾರೆ ಎಂಬುವುದನ್ನು ಈ ಫಲಿತಾಂಶಗಳೇ ಸಾಬೀತು ಪಡಿಸಿವೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.
ತಮ್ಮ ಪಕ್ಷದ ಕಾರ್ಯಕರ್ತರು ಮೋದಿ ಅವರ ಆತ್ಮವಿಶ್ವಾಸವನ್ನು ಕುಗ್ಗಿಸಿದ್ದಾರೆ ಎಂಬ ರಾಹುಲ್ ಗಾಂಧಿ ಹೇಳಿಕೆಗಳನ್ನು ಉಲ್ಲೇಖಿಸಿದ ರೆಡ್ಡಿ, ಚುನಾವಣಾ ಫಲಿತಾಂಶದ ಮೂಲಕ ಜನರು ಕಾಂಗ್ರೆಸ್ ಪಕ್ಷಕ್ಕೆ ಉತ್ತರ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.
29 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ 2ನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗಾಗಿ ಬಿಜೆಪಿ ಶ್ರಮಿಸಲಿದೆ ಎಂದು ರೆಡ್ಡಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 49 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮೈಕೂತ್ರಿಕೂಟ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ.
ಇದರಲ್ಲಿ ಎನ್‌ಸಿ 42 ಹಾಗೂ ಕಾಂಗ್ರೆಸ್ 6 ಹಾಗೂ ಮಿತ್ರ ಪಕ್ಷ ಸಿಪಿಎಂ 1 ಕ್ಷೇತ್ರಗಳಲ್ಲಿ ಗೆದ್ದು ಮ್ಯಾಜಿಕ್ ನಂಬರ್ 46 ಅನ್ನು ದಾಟಿದೆ. ಈ ಮೂಲಕ ಸರ್ಕಾರ ರಚನೆಗೆ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಂತಾಗಿದೆ.
ಬಿಜೆಪಿ 29 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೆಹಮೂಬಾ ಮುಫ್ತಿ ಅವರ ಪಿಡಿಪಿ ಪಕ್ಷ 3 ಕ್ಷೇತ್ರಗಳಲ್ಲಿ ಗೆದ್ದಿದೆ.