ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಯ(ಐಟಿಐ) ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಎರಡು ದಿನ ಮುಟ್ಟಿನ ರಜೆ ನೀಡುವ ಐತಿಹಾಸಿಕ ಘೋಷಣೆಯನ್ನು ಕೇರಳ ಸರ್ಕಾರ ಮಾಡಿದೆ.
ರಾಜ್ಯದ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ದೈಹಿಕ ಶ್ರಮ ಬೇಡುವ ಬಹಳಷ್ಟು ಕೌಶಲಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ.
ಈ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇರಳದ 100ಕ್ಕೂ ಅಧಿಕ ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಈ ಅನುಕೂಲ ಸಿಗಲಿದೆ. ಎಷ್ಟು ಮಂದಿ ವಿದ್ಯಾರ್ಥಿನಿಯರಿದ್ದಾರೆ ಎಂಬ ಮಾಹಿತಿ ಕಲೆಹಾಕುತ್ತಿರುವುದಾಗಿ ಅವರು ಹೇಳಿದ್ದಾರೆ.
ಕಳೆದ ವರ್ಷ, ಕೇರಳದ ಉನ್ನತ ಶಿಕ್ಷಣ ಇಲಾಖೆಯು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಿ ಆದೇಶ ಹೊರಡಿಸಿತ್ತು.