ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಖಾಸ ಬಸ್‌ವೊಂದು 200 ಮೀ ಆಳವಾದ ಕಂದಕಕ್ಕೆ ಉರುಳಿದ್ದು, 36 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗರ್ವಾಲ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ ಜನರನ್ನು ಬಸ್ ಮರ್ಚೂಲಾ ಬಳಿ ಉರುಳಿಬಿದ್ದಿದೆ ಎಂದು ಜಿಲ್ಲಾಧಿಕಾರಿ ಅಲೋಕ್ ಕುಮಾರ್ ಪಾಂಡೆ ಹೇಳಿದ್ದಾರೆ.
200 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿದ್ದು, ಬಸ್‌ನಲ್ಲಿ 60 ಮಂದಿ ಪ್ರಯಾಣಿಕರಿದ್ದರು. ಹಾಗಾಗಿ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.
ಪೊಲೀಸ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.
'ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಸಂಭವಿಸಿದ ದುರದೃಷ್ಟಕರ ಬಸ್ ಅಪಘಾತದಲ್ಲಿ ಪ್ರಯಾಣಿಕರ ಸಾವು ನೋವುಗಳ ಅತ್ಯಂತ ದುಃಖದ ಸುದ್ದಿಯನ್ನು ಬೆಳಿಗ್ಗೆ ಸ್ವೀಕರಿಸಿದ್ದೇನೆ. ತ್ವರಿತವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ'ಎಂದು ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
'ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಗಾಯಾಳುಗಳನ್ನು ಸ್ಥಳಾಂತರಿಸಲು ಮತ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲು ಕ್ಷಿಪ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯಬಿದ್ದರೆ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ವಿಮಾನದಲ್ಲಿ ಸಾಗಿಸಲು ಸೂಚನೆ ನೀಡಲಾಗಿದೆ'ಎಂದೂ ಅವರು ತಿಳಿಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.