ತಿರುವನಂತಪುರಂ: ಬಂಗಾಳಕೊಲ್ಲಿಯಲ್ಲಿ ಎರಡು ಚಂಡಮಾರುತಗಳು ರೂಪುಗೊಂಡಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ದಕ್ಷಿಣ ಅರೇಬಿಯನ್ ಸಮುದ್ರದ ಮಧ್ಯ ಭಾಗದಲ್ಲಿ ಮತ್ತೊಂದು ಸೈಕ್ಲೋನಿಕ್ ಪ್ರಭಾವವಿದೆ ಎಂದು ವರದಿಯಾಗಿದೆ. ಈ ಹಿನ್ನಲೆ ಕೇರಳದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಜೋರು ಮಳೆಯಾಗಲಿದೆ ಎಂದು ಐಎಂಡಿ ಉಲ್ಲೇಖಿಸಿದೆ.
5, 8 ಮತ್ತು 9ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು (ನ.05) ತಿರುವನಂತಪುರಂ, ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ 64.5 ಮಿ.ಮೀನಿಂದ 115.5 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ಕೇಂದ್ರ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಕೆಲವು ಗಂಟೆಗಳಲ್ಲಿ ತಿರುವನಂತಪುರಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಮುನ್ಸೂಚನೆ ನೀಡಿದೆ,