ಇಂಫಾಲ: ಮಣಿಪುರದ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಮತ್ತೆ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಎರಡು ದಿನಗಳಿಂದ 7 ಆರೋಪಿಗಳನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 41ಕ್ಕೆ ತಲುಪಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ನವೆಂಬರ್ 16 ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕರ ಆಸ್ತಿಯನ್ನು ಲೂಟಿ ಮಾಡಿದ ಶಂಕಿತರನ್ನು ಗುರುತಿಸಲಾಗಿದೆ ಮತ್ತು ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಹೇಳಿದ್ದಾರೆ.
ಪ್ರಜಾಪ್ರಭುತ್ವದ ಆಂದೋಲನದ ಹೆಸರಿನಲ್ಲಿ ಕೆಲವು ಗುಂಪುಗಳು ಮಂತ್ರಿಗಳು ಮತ್ತು ಶಾಸಕರ ನಿವಾಸಗಳನ್ನು ಲೂಟಿ ಮಾಡಿ ಸುಟ್ಟು ಹಾಕಿವೆ, ಸಿಸಿಟಿವಿ ಮೂಲಕ ಶಂಕಿತರನ್ನು ಗುರುತಿಸಲಾಗಿದ್ದು, ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ, ಮಣಿಪುರದಲ್ಲಿ ಇಂತಹ ಸಂಗತಿಗಳು ನಡೆಯುತ್ತಿವೆ ಎಂದು ಸಾರ್ವಜನಿಕವಾಗಿ ಹೇಳಲು ನನಗೆ ನಾಚಿಕೆಯಾಗುತ್ತದೆ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.