ನವದೆಹಲಿ: ದ್ವಿಪಕ್ಷೀಯ ಸಂಬಂಧ ವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿತ್ಸೋಟಾಕಿಸ್ ದೂರವಾಣಿ ಮಾತುಕತೆ ನಡೆಸಿದ್ದಾರೆ.
ಭಾರತ-ಗ್ರೀಸ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಉಭಯ ನಾಯಕರು ತಮ್ಮ ದೃಢ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ಶನಿವಾರ ತಿಳಿಸಿದೆ.
ಮಿತ್ಸೋಟಾಕಿಸ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ಮರು ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.
ಈ ವರ್ಷದ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಮಿತ್ಸೋಟಾಕಿಸ್ ಅವರು, ವ್ಯಾಪಾರ, ರಕ್ಷಣೆ, ಸರಕು ಮತ್ತು ಸಂಪರ್ಕ ಸೇರಿದಂತೆ ಹಲವು ವಿಷಯಗಳಲ್ಲಿ ದ್ವಿಪಕ್ಷೀಯ ಒಪ್ಪಂದ ಮಾಡಿಕೊಂಡಿದ್ದರು. ಇಂದಿನ ಮಾತುಕತೆಯಲ್ಲಿ ಅವುಗಳ ಪ್ರಗತಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಉಭಯ ನಾಯಕರು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಮತ್ತು ಪಶ್ಚಿಮ ಏಷ್ಯಾದ ಬೆಳವಣಿಗೆಗಳು ಸೇರಿದಂತೆ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಪ್ರಕಟಣೆ ತಿಳಿಸಿದೆ.