ಕಾಸರಗೋಡು: ರಾಜ್ಯದಲ್ಲಿ ಹಿಂದೂಗಳ ಪವಿತ್ರ ಸ್ಥಳಗಳ ಸುರಕ್ಷತೆಯ ವಿಚಾರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಸ್ವಾಮಿಗಳ ವಾಹನದ ಮೇಲೆ ದಾಳಿ, ಕಾಸರಗೋಡು ಜಿಲ್ಲೆಯ ವಿವಿಧ ಆರಾಧನಾಲಯಗಳಿಂದ ಕಳವು ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತಂದೊಡ್ಡುತ್ತಿದ್ದು, ಈ ಬಗ್ಗೆ ಸರ್ಕಾರ ಗಂಭೀರ ಚಇಂತನೆ ನಡೆಸಬೇಕಾದ ಅಗತ್ಯವಿದೆ. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ವಾಹನದ ಮೇಲೆ ನಡೆದ ದಾಳಿಯ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿಗೆ)ರಿಗೆ ದೂರು ನೀಡಿರುವುದಾಗಿ ತಿಳಿಸಿದರು.
ಅಲ್ಲದೆ ಎಡನೀರು ಮಠದ ಅಧೀನದಲ್ಲಿರುವ ದೇವಾಲಯ ಸೇರಿದಂತೆ ಜಿಲ್ಲೆಯ ನಾನಾ ಆರಾಧನಾಲಯಗಳಿಂದ ಕಳವು ನಡೆದಿದ್ದು, ಇದು ಆತಂಕಕಾರಿಯಾಗಿದೆ. ಧಾರ್ಮಿಕ ಸ್ಥಳಗಳ ಭದ್ರತೆಗೆ ಸರ್ಕಾರ ಕೂಡಲೇ ಕ್ರಮಕೈಗೊಳ್ಳಬೇಕು. ಈ ಅಪರಾಧ ಕೃತ್ಯಗಳ ಬಗ್ಗೆ ಅಧಿಕಾರಿಗಳು ಗಮನಹರಿಸಿ, ಆರೋಪಿಗಳ ಪತ್ತೆಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕು. ಈ ಮೂಲಕ ಸಮಾಜದಲ್ಲಿ ಧಾರ್ಮಿಕ ಸೌಹಾರ್ದತೆ ಹಾಗೂ ಭದ್ರತೆಯ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಸರ್ಕಾರ ನಡೆಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.