ನವದೆಹಲಿ: ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ನಡೆದಿದ್ದ ಪ್ರತಿಭಟನೆ ವೇಳೆ ವಶಕ್ಕೆ ಪಡೆಯಲಾಗಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಕಸ್ಟಡಿ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಗೆ ಐದು ಮಹಿಳೆಯರು ಸೇರಿದಂತೆ ಏಳು ಐಪಿಎಸ್ ಅಧಿಕಾರಿಗಳ ಹೆಸರನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯನ್ ಅವರ ನ್ಯಾಯಪೀಠ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪ್ರಕರಣ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ನವೆಂಬರ್ 6ರಂದು ಕಲ್ಕತ್ತಾ ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿ ಹಿಡಿದಿತ್ತು.
ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ, ಸಿಬಿಐ ತನಿಖೆ ಬಗ್ಗೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿತ್ತು.
ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ರಮಾ ದಾಸ್ ಅವರನ್ನು ಸೆ.7ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಕಸ್ಟಡಿಯಲ್ಲಿದ್ದ ವೇಳೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ರಮಾದಾಸ್ ಆರೋಪಿಸಿದ್ದಾರೆ.