ಮುಂಬೈ: ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಬಾಬಾ ಸಿದ್ಧೀಕಿ ಅವರ ಹತ್ಯೆ ಪ್ರಕರಣ ಸಂಬಂಧ ಮುಂಬೈ ಪೊಲೀಸರು, ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆಯನ್ನು (ಎಂಸಿಒಸಿಎ) ಶನಿವಾರ ಜಾರಿಗೊಳಿಸಿದ್ದಾರೆ.
ಮಹಾರಾಷ್ಟ್ರದ ಮಾಜಿ ಸಚಿವರೂ ಆದ ಸಿದ್ಧೀಕಿ ಅವರನ್ನು ಅಕ್ಟೋಬರ್ 12ರಂದು ರಾತ್ರಿ ಹತ್ಯೆ ಮಾಡಲಾಗಿತ್ತು. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ತಮ್ಮ ಮಗ ಹಾಗೂ ಕಾಂಗ್ರೆಸ್ ಶಾಸಕ ಜೀಶನ್ ಅವರ ಕಚೇರಿಯಿಂದ ಹೊರಗೆ ಬಂದಾಗ ಸಿದ್ದೀಕಿ ಮೇಲೆ ಗುಂಡಿನ ದಾಳಿ ನಡೆದಿತ್ತು.
ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದರು.
ಪ್ರಕರಣ ಸಂಬಂಧ ಈವರೆಗೆ 26 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.