ಚಂಡೀಗಢ: ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲ ಭೇದಿಸಿರುವ ಪಂಜಾಬ್ ಪೊಲೀಸರು ಅಮೃತಸರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 10 ಕೆ.ಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದಾರೆ. ಪ್ರಕರಣದ ಸಂಬಂಧ ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಸುಖದೇವ ಸಿಂಗ್ ಮತ್ತು ಅವತಾರ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅವರಿಂದ 10 ಕೆ.ಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ' ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳು ಪಾಕಿಸ್ತಾನದ ಮೂಲದ ಮಾದಕ ವಸ್ತು ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.