ಕೋಲ್ಕತ್ತ: ಕೋಲ್ಕತ್ತದ ಪೂರ್ವ ಭಾಗದಲ್ಲಿನ ಟೊಪ್ಸಿಯಾ ಕೊಳಗೇರಿ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 150 ಗುಡಿಸಲುಗಳು ಸುಟ್ಟು ಭಸ್ಮವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 12.50ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹರಡಿದೆ.
ಬೆಂಕಿ ನಂದಿಸಲು 15 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.
'ಕೊಳಗೇರಿ ಪ್ರದೇಶದಲ್ಲಿ ಅಗ್ನಿಶಾಮಕ ವಾಹನ ತೆರಳುವುದಕ್ಕೆ ಬೇಕಾದಷ್ಟು ಸ್ಥಳ ಇರಲಿಲ್ಲ, ಅಲ್ಲಿಗೆ ತೆರಳಿದರೂ ಸುತ್ತಲಿನ ಹಲವು ಪ್ಲಾಸ್ಟಿಕ್ ಮನೆಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಗ್ನಿಶಾಮಕ ಸಿಬ್ಬಂದಿಗೂ ಬೆಂಕಿ ನಂದಿಸುವುದು ಸವಾಲಿನ ಕೆಲಸವಾಗಿತ್ತು. ಸ್ಥಳೀಯರ ನೆರವಿನಿಂದ ಸತತ ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದೆ. ಸದ್ಯ ಜನರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.