ನವದೆಹಲಿ: ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನೆಲಸಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪತ್ತೆಹಚ್ಚುವುದು ಮತ್ತು ವಾಪಸ್ ಕಳುಹಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ರಾಜಧಾನಿ ವ್ಯಾಪ್ತಿಯಲ್ಲಿ ನೆಲಸಿರುವ ಬಾಂಗ್ಲಾದೇಶ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಈಚೆಗೆ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.
ಇದಾದ ಬೆನ್ನಲ್ಲೇ, ದೆಹಲಿ ಪೊಲೀಸರು ಎರಡು ತಿಂಗಳ ವಿಶೇಷ ಶೋಧ ಕಾರ್ಯ ಆರಂಭಿಸಿದ್ದಾರೆ.
ಸೂಕ್ತ ದಾಖಲೆಗಳಿಲ್ಲದೆ ದೆಹಲಿಯಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು, ಬಂಧಿಸಲು ಮತ್ತು ವಾಪಸು ಕಳುಹಿಸುವ ಕುರಿತು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ದೆಹಲಿಯಾದ್ಯಂತ ಬಾಂಗ್ಲಾದೇಶ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಮತ್ತು ಮಾಹಿತಿಯನ್ನು ಸಂಗ್ರಹಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಕಾರ್ಯಾಚರಣೆ ವೇಳೆ ಈವರೆಗೆ 175 ಮಂದಿ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿದ್ದಾರೆ. ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಡಿ.12ರಂದು ಪೂರ್ವ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ 20 ಮಂದಿ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ಪತ್ತೆಹಚ್ಚಿದ್ದರು.
'ದೆಹಲಿಯ ಶಾಹೀನ್‌ಬಾಗ್, ಜಾಮಿಯಾ ನಗರ, ಕಾಲಿಂದಿ ಕುಂಜ್ ಕೊಳೆಗೇರಿ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿವಿಧ ತಂಡವು ತೆರಳಿ ಅಲ್ಲಿದ್ದವರ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್‌ಗಳನ್ನು ಪರಿಶೀಲಿಸಿದ ವೇಳೆ ಅಕ್ರಮ ವಲಸಿಗರು ಪತ್ತೆಯಾದರು' ಎಂದು ಅಧಿಕಾರಿಗಳು ತಿಳಿಸಿದ್ದರು.