ಪುಣೆ: ಜಾಮೀನು ಜಾರಿಗೊಳಿಸಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಮಹಾರಾಷ್ಟ್ರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು ಇತರ ಮೂವರ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಧನಂಜಯ್ ನಿಖಮ್ ಅವರ ಪರವಾಗಿ ಕಿಶೋರ್ ಖರತ್ ಮತ್ತು ಆನಂದ್ ಖರತ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ತಿಳಿಸಿದೆ.
'ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಟೋಬರ್‌ನಿಂದ ನ್ಯಾಯಾಂಗ ಬಂಧನದಲ್ಲಿರುವ ನನ್ನ ತಂದೆಯವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಡೆ ಹಿಡಿದಿದ್ದಾರೆ' ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಜಾಮೀನು ಜಾರಿಯಾಗಬೇಕಾದರೆ ₹5 ಲಕ್ಷ ನೀಡಬೇಕು ಎಂದು ನ್ಯಾಯಾಧೀಶ ಧನಂಜಯ್ ಅವರು ಇಬ್ಬರು ಖಾಸಗಿ ವ್ಯಕ್ತಿಗಳ ಮೂಲಕ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮಹಿಳೆ ಎಸಿಬಿಗೆ ದೂರು ನೀಡಿದ್ದಾರೆ.
'ಲಂಚಕ್ಕೆ ಬೇಡಿಕೆ ಇಟ್ಟಿರುವುದು ದೂರಿನ ಪರಿಶೀಲನೆಯ ಬಳಿಕ ತಿಳಿದುಬಂದಿದೆ. ಹಾಗಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ ಅಡಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.