ಮೌಗಂಜ್: ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಎಂಟು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ನೈಗಡಿಯಲ್ಲಿನ ಪರಿಶಿಷ್ಟ ಜಾತಿಯ ಬಾಲಕರ ವಸತಿ ನಿಲಯದಲ್ಲಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಎಂಟು ಮಂದಿ ಮಕ್ಕಳು ಮತ್ತು ಅಡುಗೆಯವ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿಯ ಕಾಲು ಮುರಿದಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಾಳುಗಳಿಗೆ ನೈಗಡಿಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರೇವಾಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಜಯ್ ಶ್ರೀವಾಸ್ತವ ತಿಳಿಸಿದ್ದಾರೆ.ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.