ಇಂದೋರ್: ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ರಾಜಕೀಯ ಗದ್ದಲದ ಬಗ್ಗೆ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿರುವ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಜನರ ವಿಶ್ವಾಸವನ್ನು ಕಳೆದುಕೊಂಡಿರುವ ವಿರೋಧ ಪಕ್ಷದ ನಾಯಕರು ದೇಶವನ್ನು ದಿಕ್ಕು ತಪ್ಪಿಸಲು ನಕಲಿ ಹೇಳಿಕೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಾಯ್ಡು, 'ಪ್ರತಿಪಕ್ಷಗಳು ನಿರಂತರವಾಗಿ ನಕಲಿ ಹೇಳಿಕೆಗಳನ್ನು ಸೃಷ್ಟಿಸುತ್ತಿವೆ. ವಿಪಕ್ಷ ನಾಯಕರಿಗೆ ಜನರ ಸಮಸ್ಯೆಗಳನ್ನು ಸರಿಯಾಗಿ ಪರಿಹರಿಸಲು ಸಾಧ್ಯವಾಗದಿದ್ದಾಗ, ಸಾರ್ವಜನಿಕರ ವಿಶ್ವಾಸ ಕಳೆದುಕೊಂಡಾಗ, ವಿಷಯಗಳನ್ನು ತಿರುಚುವ ಮೂಲಕ ದೇಶವನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಾರೆ. ಅದೇ ಪರಿಸ್ಥಿತಿ ಸಂಸತ್ತಿನಲ್ಲಿ ಮತ್ತೆ ಕಂಡುಬಂದಿದೆ' ಎಂದು ಅವರು ಹೇಳಿದ್ದಾರೆ.
ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಗೆಲುವನ್ನು ಉಲ್ಲೇಖಿಸಿದ ನಾಯ್ಡು, 'ದೇಶದ ಜನರು ತಮ್ಮ ನಿಜವಾದ ನಾಯಕ ಯಾರು ಮತ್ತು ಯಾರೊಂದಿಗೆ ನಿಲ್ಲಬೇಕೆಂದು ನಿರ್ಧರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಂತಹ ಬಲಿಷ್ಠ ನಾಯಕನೊಂದಿಗೆ ದೇಶವು ಮುಂದುವರಿಯಲು ಬಯಸುತ್ತದೆ' ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿತ್ತು.
ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಆಡಳಿತಾರೂಢ ಎನ್‌ಡಿಎ ಹಾಗೂ ವಿಪಕ್ಷ 'ಇಂಡಿಯಾ' ಮೈತ್ರಿಕೂಟ ಸಂಸತ್ ಆವರಣದಲ್ಲಿ ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದ್ದವು. ಇದು ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿತ್ತು.