ನವದೆಹಲಿ: ದೇಶದಾದ್ಯಂತ 85 ನೂತನ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಸಮಾಜದ ಎಲ್ಲ ವರ್ಗದ ಮಕ್ಕಳಿಗೂ ಶಾಲಾ ಶಿಕ್ಷಣ ನೀಡಲು ತಮ್ಮ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ದೇಶದಲ್ಲಿನ ಎಲ್ಲ ವರ್ಗದ ಮಕ್ಕಳು ಶಾಲಾ ಶಿಕ್ಷಣ ಪಡೆಯಲು ನಮ್ಮ ಸರ್ಕಾರವು ಮತ್ತೊಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಡಿಯಲ್ಲಿ, ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುತ್ತದೆ. ಈ ಕ್ರಮದಿಂದಾಗಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುತ್ತದೆ. ಜತೆಗೆ ಅನೇಕ ಹೊಸ ಉದ್ಯೋಗವಕಾಶಗಳು ಕೂಡ ಸೃಷ್ಟಿಯಾಗುತ್ತವೆ' ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಸಮಾಜದ ಎಲ್ಲ ವರ್ಗದ ಮಕ್ಕಳಿಗೂ ಶಾಲಾ ಶಿಕ್ಷಣವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಅದರ ಭಾಗವಾಗಿ ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಸಂಪುಟ ಅನುಮೋದಿಸಿದೆ ಎಂದು ಮೋದಿ ಹೇಳಿದ್ದಾರೆ.
ದೇಶದಾದ್ಯಂತ 85 ನೂತನ ಕೇಂದ್ರೀಯ ವಿದ್ಯಾಲಯಗಳು ಮತ್ತು 28 ನವೋದಯ ವಿದ್ಯಾಲಯಗಳನ್ನು ತೆರೆಯಲು ಕೇಂದ್ರ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಇದರಿಂದಾಗಿ 82,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶವನ್ನು ಒದಗಿಸುತ್ತದೆ.