ನವದೆಹಲಿ: ಉತ್ತರ ಪ್ರದೇಶದ ದರೋಡೆಕೋರ ಮತ್ತು ಸಮಾಜ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯೂ ಕಠೋರವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ವ್ಯಕ್ತಿಯೊಬ್ಬರ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ ಅಲಹಾಬಾದ್ ಹೈಕೋರ್ಟ್‌ನ ಮೇ 2023ರ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿಯನ್ನು ಕೋರ್ಟ್ ಪುರಸ್ಕರಿಸಿದ್ದು ಈ ಕಾಯ್ದೆಯೂ ಕಠೋರವಾಗಿ ಕಾಣುತ್ತಿದ್ದು ನಾವು ಇದನ್ನು ಪರಿಗಣಿಸುತ್ತೇವೆ ಎಂದು ಹೇಳಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಕರಣದ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ಯೋಗಿ ಸರ್ಕಾರ ಮತ್ತು ಇತರರಿಂದ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ಕೇಳಿತ್ತು. ಈ ಸಂದರ್ಭದಲ್ಲಿ, ತಾತ್ಕಾಲಿಕ ಮಧ್ಯಂತರ ಆದೇಶದ ಮೂಲಕ ದರೋಡೆಕೋರ ಕಾಯ್ದೆಯಡಿ ಅರ್ಜಿದಾರರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯ ಹೇಳಿತ್ತು.
ಗಂಗಾ ನದಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ 1986ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಈ ಹಿಂದೆ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮತ್ತೊಂದು ಎಫ್‌ಐಆರ್ ದಾಖಲಾಗಿತ್ತು ಎಂದು ವಕೀಲರು ತಿಳಿಸಿದ್ದಾರೆ. ಒಂದೇ ಆರೋಪಕ್ಕೆ ನನ್ನ ಮೇಲೆ ಎರಡು ಬಾರಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ವಕೀಲರು ವಾದಿಸಿದರು.
ದರೋಡೆಕೋರರ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಅವರನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರರ ಪರ ಹಾಜರಾದ ವಕೀಲರು ವಾದಿಸಿದರು. ಅರ್ಜಿದಾರರ ಹೆಸರಿಲ್ಲದ ಮತ್ತೊಂದು ಪ್ರಕರಣದ ಆಧಾರದ ಮೇಲೆ ದರೋಡೆಕೋರ ಕಾಯ್ದೆಯಡಿ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ವಕೀಲರು ಹೈಕೋರ್ಟ್‌ನಲ್ಲಿ ಪ್ರತಿಪಾದಿಸಿದ್ದರು. ಇನ್ನು ನವೆಂಬರ್ 29ರಂದು ಕಾಯಿದೆಯ ಕೆಲವು ನಿಬಂಧನೆಗಳ ಸಿಂಧುತ್ವವನ್ನು ಪ್ರಶ್ನಿಸುವ ಪ್ರತ್ಯೇಕ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಅರ್ಜಿಯ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದೆ.