ಮುಂಬೈ: ಮರಾಠಿ ನಟಿ ಊರ್ಮಿಳಾ ಕೊಥಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿನಿಮಾ ಚಿತ್ರೀಕರಣ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮುಂಬೈನ ಕಂಡಿವಲಿ ಪೂರ್ವದ ಪೊಯ್ಸರ್ ಮೆಟ್ರೊ ನಿಲ್ದಾಣದ ಬಳಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದಿದೆ. ಸೂಕ್ತ ಸಮಯಕ್ಕೆ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಊರ್ಮಿಳಾ ಕೊಥಾರೆ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಊರ್ಮಿಳಾ ಕೊಥಾರೆ ಅವರು ಮರಾಠಿಯಲ್ಲಿ 'ದುನಿಯಾದಾರಿ' ಮತ್ತು ಹಿಂದಿಯಲ್ಲಿ 'ಥ್ಯಾಂಕ್ ಗಾಡ್' ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.